











ಕೇರಳದ ಪತ್ತನಂತಿಟ್ಟ ಜಿಲ್ಲೆಯ ಅಡೂರಿನಲ್ಲಿ ನಡೆದ ಆತ್ಮಹತ್ಯೆ ಪ್ರಕರಣವು ಹೊಸ ತಿರುವು ಪಡೆದುಕೊಂಡಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯ ಮರಣಕ್ಕೆ ಪ್ರಿಯಕರನೇ ಕಾರಣ ಎಂದು ಆರೋಪಿಸಿ, ಆಕೆಯ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದ ದೂರನ್ನು ತನಿಖೆಗೆತ್ತಿಕೊಂಡಿದ್ದ ಪೋಲೀಸರು ಪ್ರಾಥಮಿಕ ತನಿಖೆ ನಡೆಸಿದ್ದು ಕುಟುಂಬಸ್ಥರ ಅರೋಪಗಳನ್ನು ದೃಢಪಡಿಸಿದ್ದಾರೆ.
ಕುಟುಂಬದ ಆರೋಪದ ಪ್ರಕಾರ, ಪ್ರಿಯಕರನು ಯುವತಿಯನ್ನು ನಿರಂತರವಾಗಿ ಮಾನಸಿಕವಾಗಿ ಹಿಂಸಿಸುತ್ತಿದ್ದನು. ಮೊಬೈಲ್ ಫೋನ್‌ನಲ್ಲಿದ್ದ ಖಾಸಗಿ ಚಿತ್ರಗಳು ಹಾಗೂ ವಿಡಿಯೋಗಳನ್ನು ದುರುಪಯೋಗಪಡಿಸಿಕೊಂಡು ಬೆದರಿಕೆ ಹಾಕುತ್ತಿದ್ದನೆಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಇದರಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಹೇಳಿದ್ದರು.
ಯುವತಿಯ ಮೃತದೇಹವನ್ನು ಜುಲೈ 13ರಂದು ಸ್ಟೇರ್‌ಕೇಸ್‌ನ ಕೆಳಭಾಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಮಾಡಲಾಗಿದೆ. ಈ ಸಂಬಂಧ ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕುಟುಂಬದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಿಯಕರನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಯುವತಿಯ ಮೊಬೈಲ್ ಫೋನ್ ಹಾಗೂ ಡಿಜಿಟಲ್ ಸಾಕ್ಷ್ಯಗಳನ್ನು ವಶಪಡಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಯುವತಿ ಹಾಗೂ ಆರೋಪಿಯ ನಡುವೆ ದೀರ್ಘಕಾಲದ ಪ್ರೇಮ ಸಂಬಂಧವಿದ್ದು, ಇತ್ತೀಚಿನ ದಿನಗಳಲ್ಲಿ ಇಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈ ವೇಳೆ ಆರೋಪಿಯು ಖಾಸಗಿ ಚಿತ್ರಗಳು ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ಪ್ರಕರಣದ ಎಲ್ಲಾ ಆಯಾಮಗಳಲ್ಲೂ ಪೊಲೀಸರು ತನಿಖೆ ಮುಂದುವರಿಸಿದ್ದು, ಫೊರೆನ್ಸಿಕ್ ವರದಿ ಹಾಗೂ ಡಿಜಿಟಲ್ ಸಾಕ್ಷ್ಯಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಕುಟುಂಬಸ್ಥರು ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

