ಸುಳ್ಯದಲ್ಲಿ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರ, ಪ್ರಧಾನಿ ಹಾಗೂ ಶಿಕ್ಷಣ ಸಚಿವರ ವಿರುದ್ಧ ಟಿ.ಎಂ. ಶಾಹೀದ್  ತೀವ್ರ ವಾಗ್ದಾಳಿ

ಸುಳ್ಯ: ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳು, ಸರ್ವಾಧಿಕಾರಿ ಧೋರಣೆ ಹಾಗೂ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷದ ನಾಯಕರ ಮೇಲಿನ ದಬ್ಬಾಳಿಕೆಯನ್ನು ಖಂಡಿಸಿ ಸುಳ್ಯದಲ್ಲಿ ಇಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಳ್ಳೂರು ರಾಧಾಕೃಷ್ಣ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮುಖ್ಯ ಭಾಷಣ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಟಿ.ಎಂ. ಶಾಹೀದ್ ತೆಕ್ಕಿಲ್ ಅವರು, ಕೇಂದ್ರ ಸರ್ಕಾರ, ಪ್ರಧಾನಮಂತ್ರಿ ಹಾಗೂ ಶಿಕ್ಷಣ ಸಚಿವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಪ್ರಧಾನಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ಎಂದು ಆರೋಪಿಸಿದ ಅವರು, “ವಿರೋಧ ಪಕ್ಷಗಳ ಧ್ವನಿಯನ್ನು ಅಡಗಿಸಲು ಪೊಲೀಸ್ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಭಾರತದಲ್ಲಿ ಈಗಾಗಲೇ ಜ್ವಲಂತ ಸಮಸ್ಯೆಗಳಿಂದ ತತ್ತರಿಸುತ್ತಿದ್ದರೂ, ಕೇಂದ್ರ ಸರ್ಕಾರವು ಕೇವಲ ಸರ್ವಾಧಿಕಾರಿ ಆಡಳಿತ ನಡೆಸುತ್ತಿದೆ,” ಎಂದು ಗುಡುಗಿದರು.
ಇದೇ ವೇಳೆ ಕೇಂದ್ರ ಶಿಕ್ಷಣ ಸಚಿವರ ವಿರುದ್ಧವೂ ತೀವ್ರ ಹರಿಹಾಯ್ದ ಶಾಹೀದ್ ತೆಕ್ಕಿಲ್, ದೇಶದ ಶಿಕ್ಷಣ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಕಳವಳ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ ಕೇಂದ್ರ ಸರ್ಕಾರ ಮತ್ತು ಶಿಕ್ಷಣ ಇಲಾಖೆಯ ನಿರ್ಲಕ್ಷ್ಯವನ್ನು ಅವರು ಕಟುವಾಗಿ ಟೀಕಿಸಿದರು. “ದೆಹಲಿಯಲ್ಲಿ ನ್ಯಾಯ ಕೇಳಲು ಹೋದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗಿರುವುದು ಅಕ್ಷಮ್ಯ ಅಪರಾಧ. ವಿದ್ಯಾರ್ಥಿಗಳ ಮೇಲಿನ ಈ ದಬ್ಬಾಳಿಕೆಗೆ ನೈತಿಕ ಹೊಣೆಹೊತ್ತು ಕೇಂದ್ರ ಶಿಕ್ಷಣ ಸಚಿವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು,” ಎಂದು ಅವರು ಆಗ್ರಹಿಸಿದರು.
ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಾಗೂ ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಪ್ರಮುಖ ನಾಯಕರನ್ನು ದೆಹಲಿಯಲ್ಲಿ ಬಂಧಿಸಿರುವುದು ದೇಶದಲ್ಲಿನ ಅಘೋಷಿತ ತುರ್ತುಪರಿಸ್ಥಿತಿಗೆ ಸಾಕ್ಷಿಯಾಗಿದೆ. ಕೇಂದ್ರದ ಇಂತಹ ಬೆದರಿಕೆ ತಂತ್ರಗಳಿಗೆ ನಾವು ಬಗ್ಗುವುದಿಲ್ಲ, ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ನಮ್ಮ ಹೋರಾಟ ನಿರಂತರವಾಗಿ ಮುಂದುವರಿಯಲಿದೆ ಎಂದು ಎಚ್ಚರಿಸಿದರು.
ಈ ಬೃಹತ್ ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಧಾಕೃಷ್ಣ ಬೊಳ್ಳೂರು, ಕಾಯರ್ತೋಡಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ. ವೆಂಕಪ್ಪ ಗೌಡ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ, ಧಾರ್ಮಿಕ ಪರಿಷತ್ ಜಲ್ಲಾ ಸದಸ್ಯ ಲಕ್ಷ್ಮೀಶ ಗಬ್ಲಡ್ಕ, ನೋಟರಿ ಫವಾಝ್ ಕನಕಮಜಲು, ಮತ್ತು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭವಾನಿಶಂಕರ ಕಲ್ಮಡ್ಕ ಭಾಗವಹಿಸಿದ್ದರು.
ಅಲ್ಲದೆ, ನಗರ ಪಂಚಾಯತ್ ಮಾಜಿ ಸದಸ್ಯ ಶರೀಫ್ ಕಂಠಿ, ಇಂಟಕ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ, ರಾಜೀವಿ ರೈ, ಗೀತಾ ಕೊಲ್ಚಾರ್, ಸುಂದರಿ ಸಂಪಾಜೆ, ಜಾನಿ ಕೆ ಪಿ ,ಪಿ. ಎಸ್. ಗಂಗಾಧರ, ಪ್ರಚಾರ ಸಮಿತಿಯ ಗಫೂರ್ ಕಲ್ಮಡ್ಕ, ಧೀರಾ ಕ್ರಾಸ್ತ, ಮುಜೀಬ್ ಪೈಚಾರ್, ಹನೀಫ್ ಎಸ್. ಕೆ., ಸಿದ್ದೀಕ್ ಕೊಕ್ಕೋ, ರಾಜು ಪಂಡಿತ್, ಕುರುಂಜಿ ಉಮ್ಮರ್, ರಂಜಿತ್ ರೈ ಮೇನಾಲ, ಪ್ರಸಾದ್ ರೈ ಮೇನಾಲ, ಸತ್ಯಕುಮಾರ್ ಅಡಿಂಜ, ಧನುಷ್ ಕುಕ್ಕೆಟ್ಟಿ, ಮನ್ಸೂರ್ ಮೆಟ್ರೋ, ಮಹೇಶ್ ಬೆಳ್ಳಾರ್ಕರ್, ಜುನೈದ್ ಅಡ್ಕಾರ್, ಝುಬೈರ್ ಅರಂತೋಡ್, ರಾಧಾ ಪರಿವಾರಕಾನ, ನಂದರಾಜ‌ ಸಂಕೇಶ, ಶ್ರೀಹರಿ ಕುಕ್ಕುಡೇಲು ಹಾಗೂ ನೂರಾರು ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

Leave a Reply

Discover more from

Subscribe now to keep reading and get access to the full archive.

Continue reading