






ಉಡುಪಿ: ನಗರದ ನೈವೇದ್ಯ ಹೋಟೆಲ್ ಸಮೀಪದ ಲಯನ್ಸ್ ಸರ್ಕಲ್ ಬಳಿ ಶನಿವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಬಸ್ ಡಿಕ್ಕಿಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಪ್ರಮುಖ ಬಿಜೆಪಿ ಮುಖಂಡ ಮಂಜುಕೊಳ ಅವರ ಪತ್ನಿ ಹಾಗೂ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಎಂದು ಗುರುತಿಸಲಾಗಿದೆ.
ಶನಿವಾರ ಮಧ್ಯಾಹ್ನ ಎಂದಿನಂತೆ ಲಯನ್ಸ್ ಸರ್ಕಲ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಖಾಸಗಿ ಬಸ್ ಇವರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡ ಲಕ್ಷ್ಮೀ ಮಂಜುನಾಥ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಘಟನಾ ಸ್ಥಳಕ್ಕೆ ಉಡುಪಿ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

