
ಚೊಕ್ಕಾಡಿ: ಅಯ್ಯನಕಟ್ಟೆ–ಚೊಕ್ಕಾಡಿ–ಬೆಂಗಮಲೆ ಸಂಪರ್ಕ ರಸ್ತೆಯ ದುಸ್ಥಿತಿಯನ್ನು ಖಂಡಿಸಿ ಚೊಕ್ಕಾಡಿ ಭಾಗದಲ್ಲಿ 20ಕ್ಕೂ ಹೆಚ್ಚು ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಇಂದು ಚೊಕ್ಕಾಡಿಯಲ್ಲಿ ನಡೆಯಿತು. ಈ ಪ್ರತಿಭಟನೆಯಲ್ಲಿ ಅಮರ ಮುಡ್ನೂರು ,ಅಮರ ಪಡ್ನೂರು,ಶೇಣಿ,ಅಯ್ಯನಕಟ್ಟೆ,ಕಳಂಜ ಭಾಗದ ಸ್ಥಳೀಯ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದು ಸುವ್ಯವಸ್ಥಿತ ರಸ್ತೆಬೇಕು ಎಂದು ಅಗ್ರಹಿಸಿದರು
ರಸ್ತೆಯ ದುಸ್ಥಿತಿಯಿಂದ ನಿತ್ಯ ಸಂಕಷ್ಟ
ಕಳೆದ ಹಲವು ವರ್ಷಗಳಿಂದ ಈ ರಸ್ತೆ ಹದಗೆಟ್ಟಿದ್ದು, ರಸ್ತೆಯುದ್ದಕ್ಕೂ ಗುಂಡಿಗಳು ನಿರ್ಮಾಣವಾಗಿವೆ. ಇದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ನಿತ್ಯವೂ ಸಂಕಷ್ಟ ಎದುರಿಸುತ್ತಿದ್ದಾರೆ. ಮಳೆಗಾಲದಲ್ಲಿ ರಸ್ತೆಯ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಕಾರ್ಮಿಕರು ಸೇರಿದಂತೆ ಸ್ಥಳೀಯ ನಿವಾಸಿಗಳ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದರು.
ಪುನರಾವರ್ತಿತ ಮನವಿಗಳು ಕಿವಿಗೊಡದ ಆಡಳಿತ
ರಸ್ತೆ ದುರಸ್ತಿ ಹಾಗೂ ಅಭಿವೃದ್ಧಿಗೆ ಸಂಬಂಧಪಟ್ಟವರಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಹಾಗೂ ಗ್ರಾಮಸ್ಥರು ಒಗ್ಗೂಡಿ ಬೃಹತ್ ಪ್ರತಿಭಟನೆ ನಡೆಸಿದರು.
ಶಾಸಕರ ಗೈರುಹಾಜರಿಗೆ ಆಕ್ರೋಶ
ಪ್ರತಿಭಟನೆ ನಡೆಯುತ್ತಿದ್ದರೂ ಮಾನ್ಯ ಶಾಸಕರು ಸ್ಥಳಕ್ಕೆ ಆಗಮಿಸದಿರುವುದಕ್ಕೆ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಜನರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ರಾಧಾಕೃಷ್ಣ ಬೊಳ್ಳೂರರ ಭೇಟಿ ಹಾಗೂ ಭರವಸೆ
ಈ ನಡುವೆ ಮಾಜಿ ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ರಾಧಾಕೃಷ್ಣ ಬೊಳ್ಳೂರು ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆಯನ್ನು ಆಲಿಸಿದರು. ಪ್ರತಿಭಟನಾಕಾರರೊಂದಿಗೆ ಚರ್ಚಿಸಿದ ಅವರು, ರಸ್ತೆ ಅಭಿವೃದ್ಧಿಯ ಹೋರಾಟಕ್ಕೆ ಕೈಜೋಡಿಸುವ ಭರವಸೆ ನೀಡಿದರು.
ಅಯ್ಯನಕಟ್ಟೆ–ಚೊಕ್ಕಾಡಿ–ಬೆಂಗಮಲೆ ರಸ್ತೆ ಅಭಿವೃದ್ಧಿಗೆ ಅಗತ್ಯವಿರುವ ₹10 ಕೋಟಿ ಅನುದಾನ ಬಿಡುಗಡೆ ಮಾಡಿಸಲು ಪ್ರಯತ್ನಿಸುವುದಾಗಿ ಅವರು ತಿಳಿಸಿದರು. ರಸ್ತೆ ಅಭಿವೃದ್ಧಿಗೆ ಅಗತ್ಯ ಅನುದಾನ ದೊರಕಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸಲು ಪ್ರಯತ್ನಿಸುವುದಾಗಿ ಅವರು ಹೇಳಿದರು.
ಹೋರಾಟ ಮುಂದುವರಿಸುವ ಎಚ್ಚರಿಕೆ
ಕೇವಲ ಭರವಸೆ ನೀಡದೆ, ಶೀಘ್ರದಲ್ಲೇ ಕಾಮಗಾರಿ ಆರಂಭಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು. ರಸ್ತೆ ದುರಸ್ತಿ ಕಾಮಗಾರಿ ಆರಂಭವಾಗುವವರೆಗೆ ಹೋರಾಟ ಮುಂದುವರಿಸುವುದಾಗಿ 20ಕ್ಕೂ ಹೆಚ್ಚು ಸಂಘಟನೆಗಳು ಹಾಗೂ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.


